ಹೊಸದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ 2019 ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರೋಧಿಸಿ ಕಾಂಗ್ರೆಸ್ ಪಕ್ಷ ಡಿಸೆಂಬರ್ 28, ಶನಿವಾರದಂದು ದೇಶಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ದೆಹಲಿಯಲ್ಲಿ ಕಾಂಗ್ರೆಸ್ ಆಧ್ಯಕ್ಷೆ ಸೋನಿಯಾ ಗಾಂಧಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು ಎಲ್ಲಾ ರಾಜ್ಯಗಳಲ್ಲೂ ಪಾದಯಾತ್ರೆ ನಡೆಯಲಿದೆ. ಡಿಸೆಂಬರ್ 28 ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನವಾಗಿರುವುದರಿಂದ “ಸಂವಿಧಾನ ಉಳಿಸಿ, ಭಾರತ ಉಳಿಸಿ” ಎಂಬ ಘೋಷಣೆಯೊಂದಿಗೆ ಫ್ಲಾಗ್ ಮಾರ್ಚ್‌ನ್ನು ಹಮ್ಮಿಕೊಂಡಿದೆ. ದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಇನ್ನು ಪ್ರತಿ ರಾಜ್ಯಗಳಲ್ಲೂ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ಫ್ಲಾಗ್ ಮಾರ್ಚ್ ನಡೆಸಲಿದೆ. ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ, ಎನ್‌ಪಿಆರ್ ವಿರುದ್ಧ ದೇಶದ ಹಲವಡೆ ಪ್ರತಿಭಟನೆ ನಡೆಯುತ್ತಿದೆ. ಕೆಲವು ರಾಜ್ಯಗಳಲ್ಲಿ ಹಿಂಸಾಚಾರ ನಡೆದಿದ್ದು ಪೊಲೀಸ್ ಗೋಲಿಬಾರ್‌ಗೆ ಕೆಲವರು ಬಲಿಯಾಗಿದ್ದಾರೆ. ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ರಾಷ್ಟ್ರೀಯ ಆಧ್ಯಕ್ಷ ಅಮಿತ್ ಶಾ ಸೇರಿದಂತೆ ಬಿಜೆಪಿ ಪ್ರಮುಖರು ಆರೋಪಿಸಿದ್ದರು. ಇದೀಗ ಅಧಿಕೃತವಾಗಿ ಕಾಂಗ್ರೆಸ್ ದೇಶಾದ್ಯಂತ ಪೌರತ್ವ ಕಾಯ್ದೆ ವಿರುದ್ಧ ಹೋರಾಟ ನಡೆಸಲು ಮುಂದಾಗಿದೆ.
from India & World News in Kannada | VK Polls https://ift.tt/2SxcjXw