ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಯ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸದನದಲ್ಲಿ ಕಾಂಗ್ರೆಸ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಅಗಲಿದ ಗಣ್ಯರಿಗೆ ಸಂತಾಪ ನಿರ್ಣಯ ಮುಕ್ತಾಯಗೊಂಡ ಬೆನ್ನಲ್ಲೇ ಯತ್ನಾಳ್ ಹೇಳಿಕೆಯನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಶಾಸಕ ಯತ್ನಾಳ್ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ. ಈ ಮೂಲಕ ಸ್ವಾತಂತ್ರ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಈ ನಿಟ್ಟಿನಲ್ಲಿ ಯತ್ನಾಳ್ ಹೇಳಿಕೆ ವಿಚಾರವಾಗಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆಡಳಿತ ಪಕ್ಷದ ಸದಸ್ಯರು ನೋಟಿಸ್ ನೀಡದೆ ಚರ್ಚೆಗೆ ಅವಕಾಶ ಸಾಧ್ಯವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರು. ಆದರೆ ಸ್ಪೀಕರ್ ಇದಕ್ಕೆ ಅವಕಾಶ ನೀಡಲಿಲ್ಲ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ಪ್ರಶ್ನೆಗೆ ಉತ್ತರ ನೀಡಿದ ಬಳಿಕ ಅವಕಾಶ ನೀಡುವುದಾಗಿ ಸ್ಪೀಕರ್ ಹೇಳಿದರು. ಆದರೆ ವಿಚಾರ ಪ್ರಸ್ತಾಪಕ್ಕೆ ಸ್ಪೀಕರ್ ವಿಶೇಷಾಧಿಕಾರ ಬಳಿಸಿ ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದರು. ಇದಕ್ಕೆ ಅವಕಾಶ ನೀಡದೆ ರಾಜ್ಯಪಾಲರ ಭಾಷಣದ ಮೇಲಿನ ಪ್ರಶ್ನೆಗೆ ಉತ್ತರ ನೀಡಲು ಸಿಎಂ ಮುಂದಾಗುತ್ತಿದ್ದಂತೆ ಪ್ರತಿಪಕ್ಷಗಳು ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ರಾಜ್ಯ ಸರ್ಕಾರ ಹಾಗೂ ಶಾಸಕ ಯತ್ನಾಳ್‌ಗೆ ಧಿಕ್ಕಾರ ಕೂಗುವ ಮೂಲಕ ಸಂವಿಧಾನವನ್ನು ರಕ್ಷಿಸಿ ಎಂದು ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ.
from India & World News in Kannada | VK Polls https://ift.tt/2VyaFGF