ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಆಡಳಿತ ಶಕ್ತಿಕೇಂದ್ರವಾದ ವಿಧಾನಸೌಧದಲ್ಲಿ ಥರ್ಮಲ್ ಸ್ಕ್ರೀನಿಂಗ್ ಶುರುವಾಗಿದೆ. ವಿಧಾನಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗುತ್ತಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಶಾಸಕರು, ಸಚಿವರ ಹಣಗೆ ಥರ್ಮಲ್ ಸ್ಕ್ರೀನಿಂಗ್ ಯಂತ್ರವನ್ನು ಹಿಡಿಯುವ ಮೂಲಕ ತಪಾಸಣೆ ನಡೆಸಲಾಯಿತು. ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ವಿಧಾನಮಂಡಲದಲ್ಲಿ ಅಧಿವೇಶನ ನಡೆಯುತ್ತಿದೆ. ವಿಧಾನಸೌಧಕ್ಕೆ ನಿತ್ಯ ನೂರಾರು ಸಂಖ್ಯೆಯಲ್ಲಿ ಜನರು ಬರುತ್ತಿರುವ ಕಾರಣಕ್ಕಾಗಿ ಮುಂಜಾಗರೂಕತಾ ಕ್ರಮವಾಗಿ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತಿದೆ. ಅಲ್ಲದೆ ವಿಧಾನಸಭೆ ಹಾಗೂ ವಿಧಾನಪರಿಷತ್‌ನ ಸಭಾಂಗಣಕ್ಕೆ ಬುಧವಾರ ಬೆಳಗ್ಗೆ ವೈರಾಣು ನಿರೋಧಕವನ್ನು ಸಿಂಪಡಿಸಲಾಯಿತು. ಸೋಂಕು ಹರಡುತ್ತಿರುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯಾಗಿ ವಿಧಾನಮಂಡಲ ಅಧಿವೇಶನವನ್ನು ಮೊಟಕುಗೊಳಿಸುವ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸುತ್ತಿದೆ. ಜೊತೆಗೆ ವಿಧಾನಸೌಧಕ್ಕೆ ಸಾರ್ವಜನಿಕರ ಭೇಟಿಗೂ ನಿರ್ಬಂಧ ವಿಧಿಸಲಾಗಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ನಿರ್ದಿಷ್ಟ ಉದ್ಧೇಶವಿದ್ದರಿಗೆ ಮಾತ್ರ ಮಧ್ಯಾಹ್ನ ಮೂರು ಗಂಟೆಯ ಬಳಿಕ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬುಧವಾರ ಸಚಿವ ಸಂಪುಟದ ತುರ್ತು ಸಭೆಯನ್ನು ಕರೆದಿದ್ದಾರೆ. ಕೊರೊನಾ ಮುಂಜಾಗರೂಕತೆ ಕುರಿತಾಗಿ ಸಂಪುಟದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಹಾಗೂ ಪ್ರಮುಖ ನಿರ್ಧಾರಗಳನ್ನು ಸಭೆಯ ಬಳಿಕ ಪ್ರಕಟಿಸುವ ಸಾಧ್ಯತೆ ಇದೆ.
from India & World News in Kannada | VK Polls https://ift.tt/2x0JY37