ಮಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಲಾಕ್ಡೌನ್ ಜಾರಿಯಲ್ಲಿದ್ದು, ಇದನ್ನು ಉಲ್ಲಂಘನೆ ಮಾಡಿದವರ ಮೇಲೆ ಪೊಲೀಸರು ಲಾಠಿ ಪ್ರಯೋಗ ಮಾಡುತ್ತಿದ್ದಾರೆ. ನಿರ್ಬಂಧ ಉಲ್ಲಂಘಿಸಿ ದೇವಸ್ಥಾನದ ಪೂಜೆಗೆ ತೆರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಕುಕ್ಕೆ ಸುಬ್ರಹ್ಮಣ್ಯದ ಅರ್ಚಕ ಶ್ರೀನಿವಾಸ್ ಎಂಬುವವರು ಶನಿವಾರ ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ಪೊಲೀಸರು ಅಡ್ಡಗಟ್ಟಿ ಪ್ರಶ್ನಿಸಿ ಹಲ್ಲೆ ಮಾಡಿದ್ದಾರೆ. ಪೂಜೆಗೆ ತೆರಳುವುದಾಗಿ ದೇಗುಲದ ಕೀ ತೋರಿಸಿದರೂ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲ್ಲೆಯಿಂದ ಗಾಯಗೊಂಡಿರುವ ಅರ್ಚಕರ ಫೋಟೋ ವೈರಲ್ ಆಗಿದೆ. ಈ ಪ್ರಕರಣವನ್ನು ಪ್ರಕಾಶ್ ಅಮ್ಮಣ್ಣಾಯ ಎಂಬುವವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅರ್ಚಕರ ಮೇಲೆ ನಡೆದ ಪೊಲೀಸ್ ಹಲ್ಲೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಲಾಕ್ಡೌನ್ ಕಟ್ಟುನಿಟ್ಟುಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಮನೆಯಿಂದ ಹೊರಬಂದವರ ಮೇಲೆ ಲಾಠಿ ಪ್ರಯೋಗ ಮಾಡಿದ ಹಲವು ಪ್ರಕರಣಗಳು ವರದಿಯಾಗಿವೆ.
from India & World News in Kannada | VK Polls https://ift.tt/3aDl2NS