ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಗ್ಗುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಭಾನುವಾರ ಮಧ್ಯಾಹ್ಮದ ವರದಿ ಪ್ರಕಾರ ರಾಜ್ಯದಲ್ಲಿ ಕೇವಲ ಒಂದು ಪ್ರಕರಣವಷ್ಟೇ ಪತ್ತೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 501 ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ನಿವಾಸಿ ಮಹಿಳೆಯೊಬ್ಬರಲ್ಲಿ ಕೊರೊನಾ ಇರುವುದು ಪತ್ತೆಯಾಗಿದೆ. ನಂಬರ್ 432 ಸೋಂಕಿತರ ಸಂಪರ್ಕರಿಂದ ಈ ಮಹಿಳೆಗೂ ಕೊರೊನಾ ಸೋಂಕು ತಗುಲಿದೆ. ಸೋಂಕಿತ ಮಹಿಳೆಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಈವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದ ಜನರ ಪೈಕಿ 177 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆದರೆ 18 ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಲಾಕ್‌ಡೌನ್ ಮುಂದುವರಿದಿದೆ. ಕೆಲವು ಕಡೆಗಳಲ್ಲಿ ಲಾಕ್‌ಡೌನ್ ಸಡಿಲಗೊಳಿಸಿದರೂ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಸೇರಿದಂತೆ ಕೆಂಪು ವಲಯಗಳಲ್ಲಿ ಹೆಚ್ಚಿನ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಾಕ್‌ಡೌನ್ ಸಡಿಲಿಕೆಯಿಂದ ಕಳೆದ ಮೂರ್ನಾಲ್ಕು ದಿನಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು. ಇದು ಆತಂಕಕ್ಕೂ ಕಾರಣವಾಗಿತ್ತು. ಆದರೆ ಭಾನುವಾರ ಕೇವಲ ಒಂದು ಪ್ರಕರಣವಷ್ಟೇ ವರದಿಯಾಗಿದ್ದು ಉತ್ತಮ ಬೆಳವಣಿಗೆ.
from India & World News in Kannada | VK Polls https://ift.tt/2VWp1zi