
ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಲು ಮುಸ್ಲಿಂ ಮುಖಂಡರ ಸಭೆಯನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶುಕ್ರವಾರ ಕರೆದಿದ್ದಾರೆ. ಬೆಳಗ್ಗೆ 10.30 ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಸ್ಲಿಂ ಸಮುದಾಯದ ಮುಖಂಡರ ಜೊತೆಗೆ ಯಡಿಯೂರಪ್ಪ ಮಾತುಕತೆ ನಡೆಸಲಿದ್ದಾರೆ. ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ತಬ್ಲೀಘಿ ಜಮಾತ್ ಇಜ್ತಿಮಾ ಧಾರ್ಮಿಕ ಸಭೆಯಲ್ಲಿ ಭಾಗಿಯಾದವರಲ್ಲಿ ಕೊರೊನಾ ಸೋಂಕು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ವಿವಿಧ ಜಿಲ್ಲೆಗಳಿಂದ ತಬ್ಲೀಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಹಲವರು ಭಾಗಿಯಾಗಿದ್ದಾರೆ. ಈಗಾಗಲೇ ಭಾಗಿಯಾಗಿರುವವರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದ್ದು ಅವರೆಲ್ಲರೂ ವೈದ್ಯಕೀಯ ನಿಗಾದಲ್ಲಿದ್ದಾರೆ. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಅವರು ಹಾಗೂ ಅವರ ಕುಟುಂಬಸ್ಥರ ಸಹಕಾರ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಸ್ಲಿಂ ಮುಖಂಡರ ಜೊತೆಗೆ ಸಿಎಂ ಬಿಎಸ್‌ವೈ ಮಾತುಕತೆ ನಡೆಸಲಿದ್ದಾರೆ. ಈ ನಡುವೆ ಬೆಂಗಳೂರಿನ ಸಾದಿಕ್ ಲೇಔಟ್‌ನಲ್ಲಿ ಕೊರೊನಾ ಸೋಂಕು ಜಾಗೃತಿ ಮೂಡಿಸಲು ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ನಡೆದ ಹಲ್ಲೆ ಪ್ರಕರಣದ ಕುರಿತಾಗಿಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಮುಸ್ಲಿಂ ಸಮುದಾಯದ ಜನರಿಗೆ ಮುಖಂಡರು ಈ ಕುರಿತಾಗಿ ಜಾಗೃತಿ ಮೂಡಿಸಬೇಕು ಹಾಗೂ ಸರ್ಕಾರದ ಜೊತೆಗೆ ಸಹಕಾರ ನೀಡುವಂತೆ ಮನವರಿಕೆ ಮಾಡಬೇಕು ಎಂದು ಸಿಎಂ ಮನವಿ ಮಾಡಲಿದ್ದಾರೆ.
from India & World News in Kannada | VK Polls https://ift.tt/2ymVHJV