
ಬೆಂಗಳೂರು: ರಾಜ್ಯದಲ್ಲಿ ಸೋಂಕು ಹರಡದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದ್ದೇವೆ. ಸದ್ಯಕ್ಕೆ ರಾಜ್ಯದಲ್ಲಿ ಹೆಚ್ಚಿನ ಸೋಂಕಿತರಿಗೆ ವೆಂಟಿಲೇಟರ್ ಅಳವಡಿಸಲಾಗಿಲ್ಲ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಎಲ್ಲ ಶಾಸಕರು, ಸಚಿವರು ಹಾಗೂ ಸಂಸದರೊಂದಿಗೆ ಸಭೆ ನಡೆಸಿದರು. ನಂತರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಲವಾರು ವಿಷಯಗಳ ಬಗ್ಗೆ ಬೆಳಕು ಚೆಲ್ಲಿದರು. ರಾಜ್ಯದಲ್ಲಿ ಈವರೆಗೆ 128 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೂ ಯಾರಿಗೂ ವೆಂಟಿಲೇಟರ್ ಅಳವಡಿಸಲಾಗಿಲ್ಲ. ಇಬ್ಬರಿಗೆ ಮಾತ್ರ ಆಕ್ಸಿಜನ್ ಅಳವಡಿಸಲಾಗಿದೆ. ರಾಜ್ಯದಲ್ಲಿ ವೆಂಟಿಲೇಟರ್‌ಗಳ ಕೊರತೆಯೂ ಇಲ್ಲ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು. ರಾಜ್ಯದಲ್ಲಿ ಕೆಲವರಿಗೆ ಪಡಿತರ ಚೀಟಿ ಇಲ್ಲ. ಅವರಿಗೆ ಕೂಡ ಪಡಿತರ ವಿತರಣೆ ಮಾಡಬೇಕು. ಈ ವಿಷಯದಲ್ಲಿ ರಾಜೀ ಇಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ತಿಳಿಸಿದರು. ಇದುವರೆಗೆ ಸೋಂಕಿತರ ಪೈಕಿ 11 ಮಂದಿ ಗುಣಮುಖರಾಗಿದ್ದಾರೆ. ಪ್ರಧಾನಮಂತ್ರಿಗಳು ಘೋಷಣೆ ಮಾಡಿದಂತೆ ಲಾಕ್‌ಡೌನ್ ಮಾಡಲಾಗಿದೆ. ಈ ಸಮಯದಲ್ಲಿ ಯಾರೂ ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು. ಆಗ ಸೋಂಕು ಹರಡುವುದು ನಿಯಂತ್ರಣಕ್ಕೆ ಬರುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ರಾಜ್ಯದಲ್ಲಿ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ವಲಸೆ ಕಾರ್ಮಿಕರಿಗೂ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ಸೋಂಕಿತರಿಗಾಗಿ ಪ್ರತ್ಯೇಕ ಆಸ್ಪತ್ರೆ ಸಿದ್ಧಪಡಿಸಲಾಗಿದೆ ಎಂದು ಬಿಎಸ್‌ವೈ ಮಾಹಿತಿ ನೀಡಿದರು. ಉಪಮುಖ್ಯಮಂತ್ರಿ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರಾದ ಆರ್.ಅಶೋಕ್, ಸುರೇಶ್ ಕುಮಾರ್, ಡಾ: ಕೆ.ಸುಧಾಕರ್, ವಿ.ಸೋಮಣ್ಣ, ಶಿವರಾಮ್ ಹೆಬ್ಬಾರ್ , ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.
from India & World News in Kannada | VK Polls https://ift.tt/3bQV2yO