ಬೆಂಗಳೂರು: ಕೊರೊನಾ ಸಂಕಷ್ಟದಿಂದ ಅತಂತ್ರ ಪರಿಸ್ಥಿತಿಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳ ವೇತನವನ್ನು ನೀಡುವಂತೆ ಮಾಜಿ ಸಿಎಂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಟ್ವಿಟ್ಟರ್ ಮೂಲಕ ಅತಿಥಿ ಉಪನ್ಯಾಸಕರ ಸಂಕಷ್ಟದ ಕುರಿತಾಗಿ ಸರ್ಕಾರದ ಗಮನ ಸೆಳೆದಿರುವ ಅವರು ತುರ್ತು ನೆರವಿಗೆ ಕೂಡಲೇ ಆಗಮಿಸುವಂತೆ ಮನವಿ ಮಾಡಿಕೊಂಡಿದ್ದಾರೆ. “ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಕರೋನ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕಳೆದ ಮೂರು ತಿಂಗಳಿಂದ ಕೊರೊನಾ ಕಾರಣದಿಂದಾಗಿ ಅತಿಥಿ ಉಪನ್ಯಾಸಕರು ಸಂಷಕ್ಟದಲ್ಲಿದ್ದಾರೆ. ಆರ್ಥಿಕ ಸಂಕಷ್ಟ ಹಾಗೂ ಮಾನಸಿಕ ಒತ್ತಡದಿಂದ 8 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತಾಗಿ ವಿಜಯ ಕರ್ನಾಟಕ ವಿಶೇಷ ವರದಿಯನ್ನು ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಎಚ್ಡಿಕೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
from India & World News in Kannada | VK Polls https://ift.tt/2ZAWIZ5