ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಂಗಳವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸಿಇಓಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದರು. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿರುವ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಿದರು. ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಸೋಂಕು ತೀವ್ರ ಪ್ರಮಾಣದಲ್ಲಿ ಹರಡುತ್ತಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ಹರಡುವ ಭೀತಿಯೂ ಇದೆ. ಈ ಕಾರಣದಿಂದಾಗಿ ಕೈಗೊಳ್ಳಬೇಕಾಗಿರುವ ಮುಂಜಾಗರೂಕತಾ ಕ್ರಮಗಳ ಕುರಿತಾಗಿ ಸಿಎಂ ಮಾಹಿತಿ ಪಡೆದುಕೊಂಡರು. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುತ್ತಿರುವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಕೋವಿಡ್ ಸೂಕ್ಷ್ಮ ರಾಜ್ಯಗಳಿಂದ ಕರ್ಣಾಟಕಕ್ಕೆ ಸಂಚಾರ ನಿರ್ಬಂಧ ಇದ್ದರೂ ಕಳ್ಳ ದಾರಿಗಳಿಂದ ಜನರು ಬರುತ್ತಿದ್ದಾರೆ. ಇದನ್ನು ತಡೆಯುವುದು ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲು ಸಾಧ್ಯ ಎಂಬ ಕುರಿತಾಗಿ ವಿಡಿಯೋ ಸಂವಾದಲ್ಲಿ ಚರ್ಚೆ ನಡೆಸಲಾಯಿತು ಎಂಬ ಮಾಹಿತಿ ಇದೆ. ಅಲ್ಲದೆ ಇತರ ರಾಜ್ಯಗಳಿಂದ ಬರುವವರನ್ನು ಕ್ವಾರಂಟೈನ್‌ನಲ್ಲಿಡುವ ವಿಚಾರವಾಗಿ ಇರುವ ಗೊಂದಲಗಳ ಕುರಿತಾಗಿಯೂ ಸಂವಾದಲ್ಲಿ ಚರ್ಚೆ ನಡೆದಿದೆ. ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಮಾಡುವಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ಸಿಎಂ ಬಿಎಸ್‌ವೈ ನೀಡಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ಲಾಕ್‌ಡೌನ್ ಮತ್ತಷ್ಟು ಸಡಿಲಿಕೆಗೊಂಡರೆ ಆಗುವ ಅಪಾಯಗಳು ಹಾಗೂ ಅದನ್ನು ಎದುರಿಸುವ ಮಾರ್ಗಗಳ ಕುರಿತಾಗಿಯೂ ಚರ್ಚೆ ನಡೆದಿದೆ ಎಂಬ ಮಾಹಿತಿ ಇದೆ.
from India & World News in Kannada | VK Polls https://ift.tt/2XlSHYq