ಬೆಂಗಳೂರು: ಕೋವಿಡ್ -19 ನಿಯಂತ್ರಣ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶ್ಲಾಘಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇಲಾಖೆಯ ಸುಧಾರಣೆಗೆ ಅಗತ್ಯ ನೆರವು ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಗುರುವಾರ ನಡೆದ ಗೃಹ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಅವರು, ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಬದಲಾದ ಸನ್ನಿವೇಶಗಳಲ್ಲಿ ಸಿಇಎನ್ (ಸೈಬರ್ ಕ್ರೈಂ, ಎಕನಾಮಿಕ್ ಅಫೆನ್ಸ್ ಮತ್ತು ನಾರ್ಕೊಟಿಕ್ಸ್) ಠಾಣೆಗಳನ್ನು ಬಲಪಡಿಸಲು ಆದ್ಯತೆ ನೀಡುವಂತೆ ಸೂಚಿಸಿದರು. ಅಲ್ಲದೆ ಅಪರಾಧಗಳನ್ನು ತ್ವರಿತವಾಗಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ಫಾರೆನ್ಸಿಕ್ ಪ್ರಯೋಗಾಲಯಗಳನ್ನು ಬಲಪಡಿಸಲು ಕ್ರಮ ವಹಿಸಲಾಗುವುದು.ತುರ್ತು ಸ್ಪಂದನೆ ವ್ಯವಸ್ಥೆ ಯೋಜನೆಯಡಿ ವಾಹನ ಖರೀದಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು. ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಮೂರು ಸಾವಿರಕ್ಕೂ ಹೆಚ್ಚು ಹೋಂ ಗಾರ್ಡ್ ಗಳನ್ನು ಸೇವೆಯಲ್ಲಿ ಮುಂದುವರಿಸಿ ವಿವಿಧ ಇಲಾಖೆಗಳಿಗೆ ನಿಯೋಜಿಸಲು ತೀರ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳಿಗೆ ಹೋಂ-ಗಾರ್ಡ್ ಗಳ ಸೇವೆಯನ್ನು ಒದಗಿಸುವ ಕುರಿತು ಕ್ರಮ ವಹಿಸುವಂತೆ ಸೂಚಿಸಿದರು. ಮುಂಗಾರು ಸಂದರ್ಭದಲ್ಲಿ 200 ಮಂದಿ ಎಸ್.ಡಿ.ಆರ್.ಎಫ್ ಸಿಬ್ಬಂದಿಗೆ ತರಬೇತಿ ಪ್ರಾರಂಭವಾಗಿದೆ. ಕೆಲವು ದಿನಗಳಲ್ಲಿ ಅವರನ್ನು ನಾಲ್ಕು ವಿಭಾಗಗಳಲ್ಲಿ ನಿಯೋಜಿಸಲು ಸಾಧ್ಯವಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕಾರಾಗೃಹಗಳಲ್ಲಿ ಕೋವಿಡ್-19 ಸಂದರ್ಭದಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಒಂದೇ ಒಂದು ಪ್ರಕರಣ ವರದಿಯಾಗಿಲ್ಲ. ಸುಪ್ರೀಂ ಕೋರ್ಟಿನ ಸೂರ್ಚಿ ಅನ್ವಯ 5005 ಮಂದಿಯನ್ನು ಜಾಮೀನಿನ ಮೇಲೆ ಹಾಗೂ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಕಾರಾಗೃಹಗಳಲ್ಲಿ ಬಂಧಿಗಳ ದಟ್ಟಣೆಯನ್ನು ಶೇ. 110 ರಿಂದ ಶೇ. 95 ಕ್ಕೆ ಇಳಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದರು. ಗೃಹ ಇಲಾಖೆಯಡಿ ಬರುವ ಎಲ್ಲ ಇಲಾಖೆಗಳ ವಿವಿಧ ಮೂಲ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ಆಧರಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಬಿಎಸ್‌ವೈ, ರಾಜ್ಯದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಬೃಹತ್ ಮೊತ್ತದ ಅನುದಾನವನ್ನು ಬ್ಯಾಂಕಿನಲ್ಲಿ ಠೇವಣಿ ಇಡುವ ಸಂದರ್ಭದಲ್ಲಿ ಯಾವುದೇ ರೀತಿಯ ದುರುಪಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹಾಗೂ ದುರುಪಯೋಗಗೊಂಡ ಪ್ರಕರಣಗಳಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದರು. ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರಾದ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
from India & World News in Kannada | VK Polls https://ift.tt/3dxgY3b