ಬೆಂಗಳೂರು: ಕೊರೊನಾ ಪರಿಣಾಮ ರಾಜ್ಯ ಸರ್ಕಾರ ಸಂಕಷ್ಟದಲ್ಲಿದ್ದು ಪರಿಣಾಮ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಉದ್ಯೋಗದಿಂದ ಕೈಬಿಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು. ಆದರೆ ಇದೀಗ ಆತಂಕದಲ್ಲಿದ್ದ ಗೃಹ ರಕ್ಷಕ ದಳದ ಸಿಬ್ಬಂದಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೋಂಗಾರ್ಡ್‌ಗಳನ್ನು ಕೆಲಸದಲ್ಲಿ ಮುಂದುವರಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ಗುರುವಾರ ಬಿಎಸ್‌ವೈ ನೇತೃತ್ವದಲ್ಲಿ ನಡೆದ ಗೃಹ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಮೂರು ಸಾವಿರಕ್ಕೂ ಹೆಚ್ಚು ಹೋಂ ಗಾರ್ಡ್ ಕುಟುಂಬಗಳು ನಿರಾಳವಾಗಿವೆ. ಪೊಲೀಸರ ಜೊತೆಗೆ ರಾತ್ರಿ ಹಗಲೆನ್ನದೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಹೋಂಗಾರ್ಡ್‌ಗಳನ್ನು ಉದ್ಯೋಗದಿಂದ ಕೈಬಿಡುವ ನಿರ್ಧಾರಕ್ಕೆ ಸರ್ಕಾರ ಬಂದಿತ್ತು. ಸರ್ಕಾರದ ಈ ನಿಲುವಿಗೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದ್ದವು. ಸಾಮಾಜಕ ಸಂಘಟನೆಗಳು ಹಾಗೂ ಹೋಂಗಾರ್ಡ್‌ಗಳ ಕುಟುಂಬಗಳು ನಿರ್ಧಾರವನ್ನು ಕೈಬಿಡುವಂತೆ ವಿನಂತಿ ಮಾಡಿದ್ದವು. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡ ಸರ್ಕಾರ ಹೋಂಗಾರ್ಡ್‌ಗಳ ಸೇವೆಯಲ್ಲಿ ಮುಂದುವರಿಸಿ ವಿವಿಧ ಇಲಾಖೆಗಳಿಗೆ ನಿಯೋಜಿಸಲು ತೀರ್ಮಾನಿಸಿದೆ. ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳಿಗೆ ಹೋಂ-ಗಾರ್ಡ್ ಗಳ ಸೇವೆಯನ್ನು ಒದಗಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.
from India & World News in Kannada | VK Polls https://ift.tt/2z2kiEB