ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನಾಯಕ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಅನಾರೋಗ್ಯದ ಹಿನ್ನೆಲೆ ಅವರನ್ನು ಸೋಮವಾರ ರಾತ್ರಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸಿದ್ದರಾಮಯ್ಯ ಅವರಿಗೆ ಸೋಂಕಿರುವ ವಿಚಾರವನ್ನು ಅವರ ಪುತ್ರ, ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ದೃಢಪಡಿಸಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಕೂಡ ಟ್ವೀಟ್ ಮಾಡಿ, ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ." ಎಂದಿದ್ದಾರೆ. ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರಿಗೆ ಎರಡು ದಿನಗಳಿಂದ ಜ್ವರ ಕೂಡಾ ಇತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಕೊರೊನಾ ಹಿನ್ನೆಲೆ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ತಡರಾತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿದಾಗ ಸಿಎಂ ಅವರನ್ನು ಭೇಟಿಯಾಗಲು ತೆರಳಿರಬಹುದು ಎಂದು ಅಂದಾಜಿಸಲಾಗಿತ್ತು.
from India & World News in Kannada | VK Polls https://ift.tt/3i7D12i