ಬೆಂಗಳೂರು: ಹಾಗೂ ಉಪಚುನಾವಣೆಗೆ ಇನ್ನೇನು ಕೇವಲ ಎಂಟೇ ದಿನಗಳು ಬಾಕಿ ಉಳಿದಿವೆ. ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಅಭ್ಯರ್ಥಿಗಳ ಪ್ರಚಾರ ಕಾರ್ಯವೂ ತೀವ್ರಗೊಳ್ಳುತ್ತಿದೆ. ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಅಭ್ಯರ್ಥಿಗಳು ಎರಡು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಎಚ್, ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಹಾಗೂ ಜೆಡಿಎಸ್‌ನಿಂದ ವಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ಮೂವರು ಅಭ್ಯರ್ಥಿಗಳು ಕೊನೆಯ ಹಂತದ ಪ್ರಚಾರ ನಡೆಸುತ್ತಿದ್ದಾರೆ. ಆರ್ ಆರ್ ನಗರ ಅತ್ಯಂತ ಸೂಕ್ಷ್ಮ ವಲಯವಾಗಿ ಮಾರ್ಪಟ್ಟಿದ್ದು ಸಾಕಷ್ಟು ಕುತೂಹಲದ ಕಣವಾಗಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಹಾಗೂ ಸಚಿವ ಆರ್. ಅಶೋಕ್ ಪ್ರಚಾರ ನಡೆಸುತ್ತಿದ್ದಾರೆ. ಇನ್ನು ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮುನಿರಾಜುಗೌಡ ಕೂಡಾ ಮನಸ್ಸಿಲ್ಲದಿದ್ದರೂ ಪ್ರಚಾರ ಕಾರ್ಯದಲ್ಲಿ ಅನಿವಾರ್ಯವಾಗಿ ತೊಡಗಿಕೊಂಡಿದ್ದಾರೆ. ಅದೇ ರೀತಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಮತಯಾಚನೆ ಮಾಡುತ್ತಿದ್ದಾರೆ. ರೋಡ್ ಶೋ, ಸಭೆಗಳನ್ನು ನಡೆಸುವ ಮೂಲಕ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರವಾಗಿಯೂ ಜೆಡಿಎಸ್ ಮುಖಂಡರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಅದೇ ರೀತಿ ಶಿರಾದಲ್ಲೂ ಪ್ರಚಾರ ಕಾರ್ಯ ಬಿರುಸುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಪರವಾಗಿ ಸಿದ್ದರಾಮಯ್ಯ ಪ್ರಚಾರ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಈ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಅದೇ ರೀತಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಕ್ಟೋಬರ್ 30 ರಂದು ಪ್ರಚಾರ ನಡೆಸಲಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಮೂರು ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿದ್ದು ಚುನಾವಣಾ ಕಣ ರಂಗೇರಿದೆ. ಆದರೆ ಮತದಾರರ ಅಂತಿಮವಾಗಿ ಯಾರ ಕೈಹಿಡಿಯುತ್ತಾರೆ ಯಾರಿಗೆ ಕೈಕೊಡುತ್ತಾನೆ ಎಂಬುವುದು ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗುವಾಗ ಗೊತ್ತಾಗಲಿದೆ.
from India & World News in Kannada | VK Polls https://ift.tt/3miDmBx