ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆ ಕಳೆದ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಭಾಷಣ ಅತ್ಯಂತ ನಿರಾಸೆಯನ್ನುಂಟು ಮಾಡಿದೆ ಎಂದು ರಾಜ್ಯ ವಿಪಕ್ಷ ನಾಯಕ ಹೇಳಿದ್ದಾರೆ. ಈ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ. ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕಿತರು ಚಿಕಿತ್ಸೆಗೆ ಆಮ್ಲಜನಕ ಇಲ್ಲದೆ, ಐಸಿಯು ಹಾಸಿಗೆಗಳಿಲ್ಲದೆ, ರೆಮಿಡಿಸಿವೆರ್‌ನಂತಹ ಪ್ರಾಣರಕ್ಷಕ ಔಷಧಿ ಸಿಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ಮೋದಿ ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ. ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ ಎಂದು ಆಗ್ರಹಿಸಿದ್ದಾರೆ. ಇನ್ನು ಕೊರೊನಾ ಉಲ್ಭಣಗೊಂಡಿರುವ ಕಾರಣದಿಂದಾಗಿ ಲಾಕ್‌ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಸರ್ಕಾರ ಮಾತನಾಡುತ್ತಿದೆ. ಲಾಕ್ ಡೌನ್ ಹೇರಿದರೆ ಕಷ್ಟನಷ್ಟಕ್ಕೀಡಾಗುವ ಜನತೆಗೆ ಕೇಂದ್ರಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು ಎಂದಿರುವ ಸಿದ್ದರಾಮಯ್ಯ, ಮೋದಿ ಭಾಷಣ 'ನಿಮ್ಮ ತಲೆ ಮೇಲೆ ನಿಮ್ಮ ಕೈ' ಎಂಬ ಸಂದೇಶ ನೀಡಿದೆ. ಕೊರೊನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವನ್ನು ಕೊಡುವುದು ಬೇಡ, ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಹೇಳಿದ್ದಾರೆ.
from India & World News in Kannada | VK Polls https://ift.tt/3dyqF3U