ಚುನಾವಣಾ ಪ್ರಚಾರಕ್ಕೆ ರಮೇಶ್ ಜಾರಕಿಹೊಳಿಗೆ ಬಿಎಸ್‌ವೈ ಆಹ್ವಾನ, ಸಂತ್ರಸ್ತೆ ಪರ ವಕೀಲ ಗರಂ

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರಕ್ಕೆ ಸಿಎಂ ಬಿಎಸ್‌ ಯಡಿಯೂರಪ್ಪನವರು ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಆಹ್ವಾನ ನೀಡಿದ್ದಕ್ಕೆ ಸಿ.ಡಿ ಪ್ರಕರಣದ ಸಂತ್ರಸ್ತೆ ಯುವತಿ ಪರ ವಕೀಲರಾದ ಜಗದೀಶ್ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅತ್ಯಾಚಾರ ಆರೋಪ ಇದ್ದರೂ ಸಿಎಂ ಅವರನ್ನು ಚುನಾವಣಾ ಪ್ರಚಾರ ನಡೆಸಲು ಆಹ್ವಾನ ನೀಡುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ. ಫೇಸ್‌ಬುಕ್ ಲೈವ್‌ ಮೂಲಕ ರಾಜ್ಯ ಸರ್ಕಾರ ಹಾಗೂ ಸಿಎಂ ಯಡಿಯೂರಪ್ಪನವರನ್ನು ತರಾಟೆಗೆ ತೆಗೆದುಕೊಂಡ ಜಗದೀಶ್, ರಮೇಶ್ ಜಾರಕಿಹೊಳಿ ಬಂಧನ ಏಕೆ ಆಗಿಲ್ಲ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. ಸಂವಿಧಾನಿಕ ಹುದ್ದೆಯಲ್ಲಿ ಇದ್ದು ಅತ್ಯಾಚಾರ ಆರೋಪಿಯನ್ನು ಚುನಾವಣಾ ಪ್ರಚಾರಕ್ಕೆ ಕರೆಯಬಹುದಾ? ಸಿಎಂ ಎಷ್ಟರ ಮಟ್ಟಿಗೆ ಜವಾಬ್ದಾರಿಯುತವಾಗಿ ನಡೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸಲು ಬಿಡಬೇಕು. ಅವರ ಮೇಲೆ ಯಾವುದೇ ರೀತಿಯ ಒತ್ತಡ ಹಾಕಬಾರದು. ಸಾಮಾನ್ಯ ಜನರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಕೂಡಲೇ ಬಂಧನ ಮಾಡಲಾಗುತ್ತದೆ. ಆದರೆ ಈ ವಿಚಾರದಲ್ಲಿ ಭಿನ್ನವಾಗಿ ನಡೆದುಕೊಳ್ಳಲಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಅತ್ಯಾಚಾರದ ಆರೋಪ ಮಾಡಿದ್ದರು. ಕೆಲಸ ಕೊಡಿಸುವುದಾಗಿ ರಮೇಶ್ ವಂಚನೆ ಮಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದರು. ಅಜ್ಞಾತ ಸ್ಥಳದಿಂದ ವಿಡಿಯೋ ಮೂಲಕ ಆರೋಪ ಮಾಡುತ್ತಿದ್ದ ಯುವತಿ ಇದೀಗ ನ್ಯಾಯಾಧೀಶರ ಮುಂದೆ ಹಾಜರಾಗಿ 164 ಅಡಿಯಲ್ಲಿ ತಮ್ಮ ಹೇಳಿಕೆಯನ್ನು ಅಧಿಕೃತವಾಗಿ ನೀಡಿದ್ದಾರೆ. ಅಷ್ಟೇ ಅಲ್ಲದೆ ಎಸ್‌ಐಟಿ ಮುಂದೆಯೂ ಹೇಳಿಕೆ ನೀಡಿದ್ದಾರೆ. ಮಂಗಳವಾರ ನ್ಯಾಯಾಧೀಶರ ಮುಂದೆ ಹಾಜರಾದ ಯುವತಿ ವಿವರವಾಗಿ ತಮ್ಮ ಹೇಳಿಕೆಯನ್ನು ದಾಖಲು ಮಾಡಿದ್ದರು. ಇದಾದ ಬಳಿಕ ಎಸ್‌ಐಟಿ ಮುಂದೆ ಹಾಜರಾಗಿ ವಿವರಗಳನ್ನು ನೀಡಿದ್ದರು. ಅಲ್ಲದೆ ರಮೇಶ್ ಜಾರಕಿಹೊಳಿ ವಿರುದ್ಧ ಅವರು ಮಾಡಿರುವ ಆರೋಪಕ್ಕೆ ಪೂರಕವಾಗಿ ಹಲವು ಸಾಕ್ಷಿಗಳನ್ನು ನೀಡಿದ್ದಾರೆ. ಇದೀಗ ಎಸ್‌ಐಟಿ ಅಧಿಕಾರಿಗಳು ವಿಚಾರಣೆಯನ್ನು ಮುಂದುವರಿಸಿದ್ದು ತನಿಖೆಯ ಮುಂದುವರಿದ ಭಾಗವಾಗಿ ಆರ್‌.ಟಿ ನಗರದಲ್ಲಿರುವ ಪಿಜಿಯಲ್ಲಿ ಯುವತಿಯೊಂದಿಗೆ ಸ್ಥಳ ಮಹಜರು ನಡೆಸಿದ್ದಾರೆ. ಅಲ್ಲದೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎನ್ನಲಾಗಿದ್ದ ಫ್ಲ್ಯಾಟ್‌ನಲ್ಲೂ ಮಹಜರು ನಡೆದಿದೆ.


from India & World News in Kannada | VK Polls https://ift.tt/3dqcn41

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...