
ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾರ್ಯವೈಖರಿ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಿರಿಯ ಸಚಿವರಾದ ಕೆ ಎಸ್ ಈಶ್ವರಪ್ಪನವರು ಮುಖ್ಯಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಮತ್ತು ಹಣವನ್ನು ಮಂಜೂರು ಮಾಡಿರುವ ಬಗ್ಗೆ ನೇರವಾಗಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವುದೇ ವಿಷಯಗಳು ಇದ್ದರೂ ಕೂಡ ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲು ಅವಕಾಶವಿದೆ. ಹೀಗಿದ್ದರೂ ಕೂಡ ಸಂಪುಟ ಸಭೆಯಲ್ಲಿ ಯಾವುದೇ ವಿಷಯವನ್ನು ಈಶ್ವರಪ್ಪನವರು ಪ್ರಸ್ತಾಪ ಮಾಡದೆ ಈ ರೀತಿ ನೇರವಾಗಿ ಏಕಾಏಕಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದು ಹಿರಿಯರಾದ ಈಶ್ವರಪ್ಪನವರಿಗೆ ಶೋಭೆ ತರುವಂತಹದ್ದಲ್ಲ ಎಂದರು. ಯಾವುದೇ ತಪ್ಪನ್ನು ಮಾಡದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ಎಷ್ಟು ಸರಿ? ಎಂದು ಬಿ.ಸಿ.ಪಾಟೀಲ್ ಪತ್ರಿಕಾ ಪ್ರಕಟಣೆ ಮೂಲಕ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಇಲಾಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಆರೋಪಿಸಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ವಜುಭಾಯ್ ವಾಲಾ ಸೇರಿ ಬಿಜೆಪಿ ಹೈಕಮಾಂಡ್ಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ತಮ್ಮ ಇಲಾಖೆಗೆ ಬಿಡುಗಡೆಯಾದ 1,200 ಕೋಟಿ ರೂ.ಅನುದಾನ ಕುರಿತು ಹಸ್ತಕ್ಷೇಪ ಮಾಡುತ್ತಿದ್ದು, ಕೂಡಲೇ ಮಧ್ಯಪ್ರವೇಶ ಮಾಡಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಈಶ್ವರಪ್ಪ ಪತ್ರ ಬಿಜೆಪಿಯಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದೆ.
from India & World News in Kannada | VK Polls https://ift.tt/3dlCsBy