ಬೆಂಗಳೂರು: ಆಸ್ಪತ್ರೆಯಲ್ಲಿ ರೋಗಿಗಳ ಸಾವಿನ ಪ್ರಕರಣ ಕುರಿತು ಸಮಗ್ರ ತನಿಖೆ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಸೋಮವಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಮ್ಮಿಕೊಂಡಿದ್ದ ರಾಸಾಯನಿಕ ಸಿಂಪರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, "ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದ ಹಿನ್ನೆಲೆಯಲ್ಲಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಇವರ ಸಾವಿಗೆ ನಿಜವಾಗಿಯೂ ಇದ್ದ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ. ಇದು ಅತ್ಯಂತ ದುಃಖಕರ ಸಂಗತಿ. ಈ ಘಟನೆ ಸಂಭವಿಸಬಾರದಾಗಿತ್ತು," ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ. ಪ್ರಕರಣದ ಕುರಿತು ಸತ್ಯಾಸತ್ಯತೆ ಏನು ಎಂಬುದನ್ನು ತಿಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ರಾಜ್ಯದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚುತ್ತಿದೆ. ಆದರೂ ಕೂಡ ನಮ್ಮ ಇತಿಮಿತಿಯಲ್ಲಿ ಆಕ್ಸಿಜನ್ ಪೂರೈಕೆಯನ್ನು ಎಲ್ಲಾ ಆಸ್ಪತ್ರೆಗಳಿಗೂ ಮಾಡಲಾಗುತ್ತದೆ. ಆ ಮೂಲಕ ಪರಿಸ್ಥಿತಿಯನ್ನು ಸಾಧ್ಯವಾದಷ್ಟು ನಿಭಾಯಿಸಲಾಗುತ್ತಿದೆ ಎಂದು ಗೃಹ ಸಚಿವ ಬೊಮ್ಮಾಯಿ ತಿಳಿಸಿದರು.
from India & World News in Kannada | VK Polls https://ift.tt/3ed010K