ಚಾಮರಾಜನಗರ: 24 ಮಂದಿ ಕೋವಿಡ್ ಸೋಂಕಿತರ ಸಾವಿಗೆ ಕಾರಣವಾಗಿದ್ದ ಆಕ್ಸಿಜನ್ ದುರಂತರದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಇತರ ಸ್ಥಳೀಯ ಮುಖಂಡರ ಜೊತೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಆಕ್ಸಿಜನ್ ಕೊರತೆಯಿಂದ ಕೊರೊನಾ ಸೋಂಕಿತರು ಸಾವಿಗೀಡಾಗಿರುವ ದುರಂತದ ಬಗ್ಗೆ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಎಂ.ಆರ್.ರವಿ. ಎಸ್ಪಿ ದಿವ್ಯಾ ಸಾರಾ ಥಾಮಸ್ ಸೇರಿದಂತೆ ವೈದ್ಯಾಧಿಕಾರಿಗಳು ಹಾಜರಿದ್ದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಶಾಸಕರಾದ ಪುಟ್ಟರಂಗಶೆಟ್ಟಿ, ನರೇಂದ್ರ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದ್ದು ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸೋಂಕಿತರು ಮೃತಪಟ್ಟಿದ್ದರು. ರಾಜ್ಯಾದ್ಯಂತ ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯ ತನಿಖೆಗೆ ಈಗಾಗಲೇ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರ ರಾಜೀನಾಮೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ ಮಾಡಿದ್ದಾರೆ.
from India & World News in Kannada | VK Polls https://ift.tt/3teRKOo