ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ವಿದಾಯ ಭಾಷಣ ಮಾಡಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜಭವನಕ್ಕೆ ತೆರಳಿದ್ದಾರೆ. ತಮ್ಮ ಭಾಷಣದ ನಂತರ ಸಾಧನಾ ಸಮಾವೇಶದ ವೇದಿಕೆಯಿಂದ ಇಳಿದು ರಾಜಭವನಕ್ಕೆ ತೆರಳಿರುವ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಧಿಕೃತವಾಗಿ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ರಾಜೀನಾಮೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ಯಡಿಯೂರಪ್ಪ ಅವರಿಗೆ ಸಚಿವರಾದ ಬಿ.ಸಿ ಪಾಟೀಲ್, ಮಾಧುಸ್ವಾಮಿ, ಕೆ. ಸುಧಾಕರ್, ಲಕ್ಷ್ಮಣ ಸವದಿ ಸೇರಿದಂತೆ ಹಲವು ಸಚಿವರುಗಳು ಸಾಥ್ ನೀಡಿದ್ದಾರೆ. ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಉರುಳಿಸಿ 2019ರ ಜುಲೈ 26ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಎಸ್ ಯಡಿಯೂರಪ್ಪ ಅವರು, ಎರಡು ವರ್ಷ ಪೂರ್ಣಗೊಳಿಸಿ ಅಧಿಕಾರ ಸ್ವೀಕರಿಸಿದ ದಿನವೇ ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ವಿದಾಯ ಭಾಷಣ ಮಾಡಿದ್ದ , ಭಾಷಣದುದ್ದಕ್ಕೂ ತಮ್ಮ ರಾಜಕೀಯ ಜೀವನವನ್ನು ನೆನೆದು ಭಾವುಕರಾಗಿದ್ದರು.
from India & World News in Kannada | VK Polls https://ift.tt/3iMScjz